ಬೆಂಗಳೂರು: ಕೊರೊನಾ ಸೋಂಕಿತರಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಸಂಜೆ 4 ಗಂಟೆಗೆ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ ಯಡಿಯೂರಪ್ಪ ಅವರನ್ನು ಬೀಳ್ಕೊಟ್ಟರು.
ಆಗಸ್ಟ್ 2ರ ಭಾನುವಾರ ರಾತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ತಗಲಿರುವುದು ಖಚಿತವಾಗಿತ್ತು. ಬಳಿಕ ಅವರನ್ನು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 9 ದಿನದಿಂದ ಅವರು ಆಸ್ಪತ್ರೆಯಲ್ಲಿದ್ದರು. ಆಸ್ಪತ್ರೆಯಿಂದಲೇ ಕೆಲಸ ಮಾಡುತ್ತಿದ್ದ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡುತ್ತಿದ್ದರು. ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಕ್ಷಣ-ಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದರು. ಯಡಿಯೂರಪ್ಪಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ವರದಿ ನಗೆಟೀವ್ ಬಂದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ತೀರ್ಮಾನವನ್ನು ಕೈಗೊಳ್ಳಲಾಯಿತು. ಕೋವಿಡ್ ಸೋಂಕು ತಗಲಿದ್ದರೂ ಸೋಂಕಿನ ಯಾವುದೇ ಲಕ್ಷಣಗಳು ಇರಲಿಲ್ಲ. ಆಸ್ಪತ್ರೆಯಿಂದ ಹೊರ ಬಂದ ಯಡಿಯೂರಪ್ಪ ಕೈ ಮುಗಿದು ಎಲ್ಲಾ ವೈದ್ಯಕೀಯ ಸಿಬ್ಬಂದಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.
