ಬೆಂಗಳೂರು, ಆ.26: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ(ಆಫ್ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನ ಸುಬ್ರಹ್ಮಣ್ಯ ನಗರದ ವಾರ್ಡ್ ಸಂಖ್ಯೆ 66ರಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರಕಾರವು ಮುಂದಿನ ತಿಂಗಳಿಂದ ಆನ್ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ.
ಜತೆಗೆ, ಅಕ್ಟೋಬರ್ ತಿಂಗಳಿಂದಲೇ ಎಲ್ಲ ಕಾಲೇಜುಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಕೂಡ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಎಂದರು.
ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಅಂತಿಮ ವರ್ಷದ ಪರೀಕ್ಷೆ: ಶೈಕ್ಷಣಿಕ ವರ್ಷದ ಆರಂಭದ ಜತೆಯಲ್ಲಿಯೇ ಅಂತಿಮ ವರ್ಷದಲ್ಲಿರುವ ಎಲ್ಲ ಪದವಿ, ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಜತೆಗೆ, ಬ್ಯಾಕ್ಲಾಗ್ ಉಳಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಲಾಗುವುದು. ಯಾವುದೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಡಿಸಿಎಂ ಹೇಳಿದರು.