ಯಮನಕಮರಡಿ: ಭಯ ಭೀತರಾಗದೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡರೆ ಕೋವಿಡ್ ಸೋಂಕು ನಿರ್ಣಾಮ ಮಾಡಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಲಹೆ ನೀಡಿದರು.
ಯಮಕನಮರಡಿ ಗುರುಸಿದ್ದ ಮಹಾಸ್ವಾಮಿ ಸಭಾ ಭವನದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ “ಆರೋಗ್ಯ ಹಸ್ತ” ಕಾರ್ಯಕ್ರಮಕ್ಕೆ ಸಸಿಗೆ ನೀರು ಎರೆಯುವ ಮೂಲಕ ಚಾಲನೆ ನೀಡಿ ಬಳಿಕ ಮಾತನಾಡಿದರು.
ಕೋವಿಡ್ ಸಾಂಕ್ರಾಮಿಕ ರೋಗ ತಡೆಗಟ್ಟಲು ಕಾಂಗ್ರೆಸ್ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿ, ರಾಜ್ಯದ 30 ಜಿಲ್ಲೆಗಳಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಮೂಲಕ ಪ್ರತಿಯೊಬ್ಬರ ಆರೋಗ್ಯ ತಪಾಸಣೆಗೆ ಕಾಂಗ್ರೆಸ್ ಪಕ್ಷ ಮುಂದಾಗಿದೆ. ಜನರು ಕೂಡ ಭಯ ಭೀತರಾಗದೆ ಇದಕ್ಕೆ ಸ್ಪಂದನೆ ನೀಡಬೇಕು. ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು. ಮಾಸ್ಕ್ ಧರಿಸುವುದು ಹಾಗೂ ಮುಂಜಾಗೃತಾ ಕ್ರಮಗಳ ಅನುಸರಿಸುವ ಮೂಲಕ ಕೋವಿಡ್ ಸೋಂಕನ್ನು ಬುಡ ಸಮೇತ ಕಿತ್ತು ಹಾಕಲು ಎಲ್ಲರು ಮುಂದಾಗಬೇಕು ಎಂದರು.
ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ 33 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಗ್ರಾಮದಲ್ಲಿಯೂ ನಾಳೆಯಿಂದ ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕು ತಡೆಗಟ್ಟಲು ಶ್ರಮಿವಹಿಸಿದ ಯುವಕರಿಗೆ, ಕೋವಿಡ್ ವಾರಿಯರ್ಸ್ ಗಳಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಸನ್ಮಾನಿಸಿದರು.
ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮಾಜಿ ಸಚಿವ ವೀರಕುಮಾರ್ ಪಾಟೀಲ್, ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ಸುನೀಲ್ ಹನುಮನ್ನವರ್, ಮಾಹಾವೀರ ಮೋಹಿತೆ ಮುಂತಾದವರು ಇದ್ದರು.