ಬೆಂಗಳೂರು: ಬ್ರಿಟನ್ನಲ್ಲಿ ರೂಪಾಂತರಿತ ಕರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಜನವರಿ 2 ರ ತನಕ ನೈಟ್ ಕರ್ಫ್ಯೂ ಎಂದು ಸರ್ಕಾರ ಘೋಷಿಸಿತ್ತು. ಇದಕ್ಕೂ ಮೊದಲು ನಿನ್ನೆಯಿಂದಲೇ ಜಾರಿ ಎಂದಿತ್ತಾದರೂ, ಬಳಿಕ ಅದರಿಂದ ಹಿಂದೆ ಸರಿದಿತ್ತು. ಇಂದು ಮತ್ತೆ ನಿನ್ನೆಯ ತೀರ್ಮಾನದಿಂದಲೂ ಹಿಂದೆ ಸರಿದಿರುವ ರಾಜ್ಯ ಸರ್ಕಾರ, ನೈಟ್ ಕರ್ಫ್ಯೂ ಇರಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿರುವುದಿಷ್ಟು – ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕಫ್ರ್ಯೂವಿನ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕಫ್ರ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.
ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.
CKNEWSKANNADA / BRASTACHARDARSHAN CK NEWS KANNADA