ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಅಧಿಕೃತವಾಗಿ ಟಿಕೆಟ್ ನೀಡಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸತೀಶ ಜಾರಕಿಹೊಳಿ ಅವರಿಗೆ ಪಕ್ಷದ ಭಿ-ಪಾರಂ ನೀಡಿದ್ದಾರೆ.
ಸತೀಶ ಅವರೇ ಉಪಚುನಾವಣೆಗೆ ಸ್ಪರ್ಧಿಸಬೇಕೆಂದು ಕಾಂಗ್ರೆಸ್ ನಿಂದ ಒಕ್ಕೋರಲ ಕೂಗು ಕೇಳಿ ಬಂದಿತ್ತು. ರಾಜ್ಯದ ಎಲ್ಲ ಕಾಂಗ್ರೆಸ್ ನಾಯಕರು ಸತೀಶ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದಕ್ಕೆ ಹೈಕಮಾಂಡ್ ಕೂಡ ಒಪ್ಪಿಗೆ ನೀಡಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಜಿಲ್ಲೆಯ ಪ್ರಭಾವಿ ನಾಯಕ ಸತೀಶ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸುತ್ತಿರುವುದರಿಂದ ಚುನಾವಣಾ ಕಣ ರಂಗೇರಿದೆ.
ಈ ಮೂಲಕ ಇದೇ ಮೊದಲ ಬಾರಿಗೆ ಜಾರಕಿಹೊಳಿ ಕುಟುಂಬದ ಸದಸ್ಯರೊಬ್ಬರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದಂತಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾ.29 (ಸೋಮವಾರ) ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ನಾಮಪತ್ರ ಸಲ್ಲಿಕೆ ವೇಳೆ ಸತೀಶ ಅವರೊಂದಿಗೆ ಹಾಜರಿರಲಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಹ ನಾಮಪತ್ರ ಸಲ್ಲಿಕೆ ವೇಳೆ ಭಾಗವಹಿಸುವ ಸಾಧ್ಯತೆ ಇದೆ.