ಬೆಂಗಳೂರು, ಜು.7- ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆ ಆವರಣ ದಲ್ಲಿ ಖಾಸಗಿ ಕಂಪೆನಿಗಳ ಸಿಎಸ್ಆರ್ ಅನುದಾನದಡಿ ನೂತನವಾಗಿ ನಿರ್ಮಿಸಿದ್ದ 70 ಹಾಸಿಗೆಗಳ ಸಾಮಥ್ರ್ಯದ ಮೇಕ್ಶಿಫ್ಟ್ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿ, ಕೋವಿಡ್- 19ರ ಮೂರನೆ
ಅಲೆ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ಈ ಆಸ್ಪತ್ರೆ ನಿರ್ಮಿಸಲಾಗಿದೆ.
ದೇಶದ ಆರು ರಾಜ್ಯಗಳಲ್ಲಿ ಇಂತಹ ಮೇಕ್ಶಿಫ್ಟ್ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಈ ಆಸ್ಪತ್ರೆಯನ್ನು ನಮ್ಮ ರಾಜ್ಯದಲ್ಲಿ ನಿರ್ಮಿಸಲಾಗಿದೆ ಎಂದರು. ಕೋವಿಡ್ ಮೂರನೆ ಅಲೆಯನ್ನು ರಾಜ್ಯಸರ್ಕಾರ ಯಶಸ್ವಿಯಾಗಿ ತಡೆಗಟ್ಟಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿ ಎಲ್ಲ ಚಟುವಟಿಕೆಗಳಿಗೂ 15 ದಿನಗಳ ವಿನಾಯಿತಿ ನೀಡಲಾಗಿದೆ.
ಜನರು ಮಾಸ್ಕ್ ಧರಿಸಿ ಸ್ಯಾನಿಟೈಜರ್ ಬಳಸಿ ಅಂತರ ಕಾಪಾಡಿಕೊಂಡು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಮೊದಲ ಸ್ಥಿತಿಗೆ ತರಬೇಕಾದ ಅನಿವಾರ್ಯ ಸ್ಥಿತಿ ಬರಬಹುದು ಎಂದು ಎಚ್ಚರಿಸಿದರು. ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡದಂತೆ ಕೋವಿಡ್ ಹರಡುವಿಕೆ ತಡೆಯಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಅವರು ಹೇಳಿದರು.
ರಾಜ್ಯದಲ್ಲಿ ವೈದ್ಯಕೀಯ ಮೂಲ ಸೌಲಭ್ಯ ಹೆಚ್ಚಿಸಲಾಗಿದೆ. ಇಂದು ಉದ್ಘಾಟನೆಯಾದ ಮೇಕ್ಶಿಫ್ಟ್ ಆಸ್ಪತ್ರೆಯು ದೊಡ್ಡಬಳ್ಳಾಪುರ ಮತ್ತು ಸುತ್ತಮುತ್ತಲ ಜನರ ಆರೋಗ್ಯ ಸೇವೆಗೆ ಸಹಕಾರಿಯಾಗಲಿದೆ. ಕೋವಿಡ್ ನಂತರವೂ ಈ ಆಸ್ಪತ್ರೆ ಜನರ ಉಪಯೋಗಕ್ಕೆ ಬರಲಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ವೈದ್ಯರು, ನರ್ಸ್ಗಳು ಹಾಗೂ ಸ್ವಾಬ್ ಕಲೆಕ್ಟರ್ಗಳನ್ನೊಳಗೊಂಡ ತಂಡ ಪ್ರತಿ ಹಳ್ಳಿಯ ಜನರ ಮನೆ ಬಾಗಿಲಿಗೆ ತೆರಳಿ ಸ್ಥಳದಲ್ಲೇ ಪರೀಕ್ಷೆ ನಡೆಸಿ ಕೋವಿಡ್ ಔಷಧವುಳ್ಳ ಮೆಡಿಕಲ್ ಕಿಟ್ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ 1075 ಗ್ರಾಮಗಳಿಗೆ ಭೇಟಿ ನೀಡಿ 1,58,171 ಜನರನ್ನು ಸ್ಕ್ರೀನಿಂಗ್ ಮಾಡಲಾಗಿದೆ. 15,580 ಜನರಿಗೆ ಆರ್ಟಿಪಿಸಿಆರ್ ಪರೀಕ್ಷೆ, 2815 ಜನರಿಗೆ ರ್ಯಾಟ್ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 318 ಮಂದಿಗೆ ಕೋವಿಡ್ ದೃಢಪಟ್ಟಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಮಕ್ಕಳ ತಜ್ಞ ವೈದ್ಯರನ್ನೊಳಗೊಂಡ ತಂಡವು ಪ್ರತಿ ತಾಲ್ಲೂಕಿನಲ್ಲಿ ಐದು ತಂಡದಂತೆ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ 4467 ಅಪೌಷ್ಠಿಕತೆಯುಳ್ಳ ಮಕ್ಕಳನ್ನು ಗುರುತಿಸಿ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ಜತೆಗೆ ಇತರೆ ರೋಗವುಳ್ಳ ಮಕ್ಕಳಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಕ್ಕರೆ ಸಚಿವ ಎಂ.ಟಿ.ಬಿ.ನಾಗರಾಜ್, ಕಂದಾಯ ಸಚಿವ ಆರ್.ಅಶೋಕ್, ಶಾಸಕರಾದ ವೆಂಕಟರಮಣಯ್ಯ, ನಿಸರ್ಗ ನಾರಾಯಣಸ್ವಾಮಿ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಿಬ್ಬೂರು ಜಯಣ್ಣ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನವೀನ್ರಾಜ್ ಸಿಂಗ್, ಜಿಲ್ಲಾಧಿಕಾರಿ ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.