ಹಾನಗಲ್: ಸಮ್ಮಿಶ್ರ ಸರ್ಕಾರ ಪತನವಾಗಿ ಈಗ ಮತ್ತೊಂದು ಸರ್ಕಾರ ಬಂದಿದೆ. ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಸಮ್ಮಿಶ್ರ ಸರ್ಕಾರ ಪತನವಾಗಿರುವ ಬಗ್ಗೆ ಈಗ ಚರ್ಚೆ ಮಾಡುವುದು ಅಪ್ರಸ್ತುತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಹಾನಗಲ್ ನಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಉಪಚುನಾವಣೆ ಪ್ರಚಾರ ನಡೆಸುತ್ತಿರುವ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು.
‘ಕಾಂಗ್ರೆಸ್ ಮುಳುಗುವ ಹಡಗು’ ಎಂಬ ಬಿಜೆಪಿಯ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಸತೀಶ ಜಾರಕಿಹೊಳಿ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯವರ ಪರಿಸ್ಥಿತಿ ಏನಾಗಿದೆ? ಎಂದು ಪ್ರಶ್ನಿಸಿದರು. ಯಾರನ್ನೂ ಯಾರೂ ಮುಳುಗಿಸುವುದಕ್ಕೆ ಆಗುವುದಿಲ್ಲ. ಮತದಾರರು ಎಲ್ಲವನ್ನೂ ತೀರ್ಮಾನ ಮಾಡುತ್ತಾರೆ ಎಂದು ಟಾಂಗ್ ನೀಡಿದರು.
ಹಾನಗಲ್ ಹಾಗೂ ಸಿಂದಗಿ ವಿಧಾನಸಭೆ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಪಕ್ಷದಿಂದ ಕಾರ್ಯತಂತ್ರ ರೂಪಿಸಲಾಗಿದೆ. ಜನರು ನಮ್ಮ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದು ಸತೀಶ ತಿಳಿಸಿದರು.