Breaking News

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ


ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು.

ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಲಖನ್ ಜಾರಕಿಹೊಳಿ ಅವರಿಗೆ ಸ್ಪರ್ಧಿಸಲು ಪಕ್ಷವು ಅವಕಾಶ ಕಲ್ಪಿಸಿಕೊಟ್ಟಲ್ಲಿ ಬಿಜೆಪಿಯಿಂದ ಇಬ್ಬರೂ ಅಭ್ಯರ್ಥಿಗಳು ಪರಿಷತ್‍ಗೆ ಆಯ್ಕೆಯಾಗಲಿದ್ದಾರೆ ಎಂದು ಹೇಳಿದರು.

ಕಳೆದ 2019 ರಲ್ಲಿ ಜರುಗಿದ ವಿಧಾನಸಭಾ ಉಪಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರು ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೂ ನಂತರ ಬದಲಾದ ಸ್ಥಿತಿಯಲ್ಲಿ ಅವರು ಬಿಜೆಪಿಯೊಂದಿಗೆ ಗುರುತಿಸಿಕೊಂಡು ಸಕ್ರೀಯರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರ ಪ್ರಚಾರ ಕೈಗೊಂಡು ಅಂಗಡಿಯವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಬಿಜೆಪಿಯ ಮೊದಲನೇ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾದಂತಾಗಿದೆ. ಲಖನ್ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಪಕ್ಷವು ಘೋಷಿಸಿದರೆ ನಿಶ್ಚಿತವಾಗಿಯೂ ಎರಡೂ ಸ್ಥಾನಗಳು ಬಿಜೆಪಿ ಮಡಿಲಿಗೆ ಬೀಳಲಿವೆ. ಇದಕ್ಕೆ ಪಕ್ಷದ ಮುಖಂಡರು ಅವಕಾಶ ಮಾಡಿ ಕೊಡಬೇಕು. ಅಲ್ಲದೇ ಲಖನ್ ಅವರು ಜಿಲ್ಲೆಯಲ್ಲಿ ತಮ್ಮದೇಯಾದ ಕಾರ್ಯಕರ್ತರ ಪಡೆಯ ಜೊತೆಗೆ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನೆಲ್ಲ ಗಮನಿಸಿ ಲಖನ್ ಅವರನ್ನು ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಯನ್ನಾಗಿ ಘೋಷಿಸಲು ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡರು.

ಬಿಜೆಪಿ ದೇಶದಲ್ಲಿಯೇ ಅತೀ ದೊಡ್ಡ ಹಾಗೂ ಶಕ್ತಿಶಾಲಿ ಪಕ್ಷವಾಗಿದೆ. ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ ತತ್ವವನ್ನು ಆಧಾರವಾಗಿಟ್ಟುಕೊಂಡು ಸರ್ಕಾರ ಕೆಲಸ ನಿರ್ವಹಿಸುತ್ತಿದೆ. ಶಿಕ್ಷಣ, ಸಂಘಟನೆ ಹಾಗೂ ಹೋರಾಟಗಳನ್ನು ಮೈಗೂಡಿಸಿಕೊಂಡು ಇಡೀ ದೇಶದ ಸಮಗ್ರ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಎಲ್ಲ ವರ್ಗಗಳ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಬರಲಿರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸಲು ಪಕ್ಷದ ಮುಖಂಡರುಗಳು ಒಗ್ಗಟ್ಟಾಗಿ ಶ್ರಮಿಸಬೇಕು. ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲು ಕಾರ್ಯಕರ್ತರು ಮುಂದೆ ಬರಬೇಕು. ಬರಲಿರುವ ವಿಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ದುಡಿಯಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.

ಬೆಳಗಾವಿ ಲೋಕಸಭಾ ಸದಸ್ಯೆ ಮಂಗಲಾ ಅಂಗಡಿ ಮಾತನಾಡಿ, ತಮ್ಮ ಗೆಲುವಿಗೆ ಕಾರಣ ೀಕರ್ತರಾದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರೀಯ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಕಾರ್ಯಕರ್ತರದ್ದಾಗಿದೆ. ಡಿಸೆಂಬರ್ 10 ರಂದು ನಡೆಯುವ ವಿಪ ಚುನಾವಣೆಯಲ್ಲಿ ಬಿಜೆಪಿ ಅಭ್ತರ್ಥಿಗಳ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದು ಹೇಳಿದರು.

ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಮಾತನಾಡಿ, ಈ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈಗಳನ್ನು ಬಲಪಡಿಸಲು ಬಿಜೆಪಿಗೆ ಮತ ಚಲಾಯಿಸಬೇಕು. ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ನಿಗಮ ಮಂಡಳಿಗಳಿಗೆ ನೇಮಿಸುವಂತೆ ಅವರು ಪಕ್ಷದ ಮುಖಂಡರಲ್ಲಿ ಕೋರಿಕೊಂಡರು.

ಅಧ್ಯಕ್ಷತೆಯನ್ನು ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು.
ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಸಂಜಯ ಪಾಟೀಲ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪ್ರೇಮಾ ಬಂಡಾರಿ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಈರಣ್ಣ ಅಂಗಡಿ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಜಯಪ್ರಕಾಶ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಸಂದೀಪ ದೇಶಪಾಂಡೆ, ಗೋವಿಂದ ಕೊಪ್ಪದ, ಮುತ್ತೆಪ್ಪ ಮನ್ನಾಪೂರ, ಆನಂದ ಮೂಡಲಗಿ, ಪ್ರಕಾಶ ಮಾದರ, ಮಂಗಲಾ ಹಿರೇಮಠ, ಈರಣ್ಣ ಢವಳೇಶ್ವರ, ಮಹಾಂತೇಶ ಕುಡಚಿ, ಪರಸಪ್ಪ ಬಬಲಿ, ಅರಭಾವಿ ಮಂಡಲ ವಿವಿಧ ಮೋರ್ಚಾಗಳ ಅಧ್ಯಕ್ಷರಾದ ವಾಸಂತಿ ತೇರದಾಳ, ತಮ್ಮಣ್ಣ ದೇವರ, ಪ್ರಮೋದ ನುಗ್ಗಾನಟ್ಟಿ, ಇಕ್ಬಾಲ್ ಸರ್ಕಾವಸ್, ನಾಗಪ್ಪ ಕುದರಿ, ಯಲ್ಲಾಲಿಂಗ ವಾಳದ, ಬಿಜೆಪಿ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅರಭಾವಿ ಗುಡ್ಡದವಾರಿಯಲ್ಲಿ ಮತಗಟ್ಟೆ ಅಧ್ಯಕ್ಷರ ಮನೆಗಳಿಗೆ ನಾಮಫಲಕಗಳನ್ನು ಅಂಟಿಸಲಾಯಿತು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ