ಬೆಳಗಾವಿ: ಕಳೆದ ಮೂರು ವರ್ಷಗಳಿಂದ ನಿರಂತರ ಪ್ರವಾಹ ಉಂಟಾಗುತ್ತಿದ್ದು, ಮತ್ತೆ ಈ ವರ್ಷವೂ ಭಾರೀ ಮಳೆ ಆಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜನರಿಗೆ ತೊಂದರೆ ಆಗದಂತೆ ಶೀಘ್ರ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಆಗ್ರಹಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ, ಸಚಿವರು, ಜಿಲ್ಲಾಡಳಿತ ಎಲ್ಲಾ ರೀತಿಯ ಸಮಸ್ಯೆಗಳನ್ನು ಅವಲೋಕಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡಬೇಕು. ಶಾಲೆಗಳ, ರಸ್ತೆಗಳ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕೆಂದು ಅವರು ತಿಳಿಸಿದರು.
ಇನ್ನು ಸಿದ್ದರಾಮೋತ್ಸವದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅದು ಸಿದ್ದರಾಮೋತ್ಸವ ಅಲ್ಲ. ಅದು ಸಿದ್ದರಾಮಯ್ಯನವರ 75ನೇ ಜನ್ಮದಿನದ ಕಾರ್ಯಕ್ರಮ. ಈ ಕಾರ್ಯಕ್ರಮವನ್ನು ಮೊದಲು ಸಿದ್ದರಾಮಯ್ಯನವರ ಅಭಿಮಾನಿಗಳು ಆಚರಿಸುವ ತಯಾರಿಯಲ್ಲಿದ್ದರು, ಆದರೆ ಈಗ ಪಕ್ಷದ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಇಲ್ಲ. ಸಿದ್ದರಾಮೋತ್ಸವ ಕಾರ್ಯಕ್ರಮ ಹೆಸರಲ್ಲಿ ಕೆಲವರು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು.