ಬೆಳಗಾವಿ: ನಗರದ ಹೊರವಲಯದಲ್ಲಿ ಕೈಗೊಂಡಿರುವ ವರ್ತುಲ ರಸ್ತೆ (ರಿಂಗ್ ರೋಡ್) ಯೋಜನೆ ಕಾಮಗಾರಿ ಕೈ ಬೀಡುವಂತೆ ಒತ್ತಾಯಿಸಿ ಕಡೋಲಿ, ಬೆನ್ನಾಳಿ, ದೇವಗಿರಿ, ಅಗಸಗಾ, ಅಂಬೇವಾಡಿ ಗ್ರಾಮದ ರೈತರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ರೈತರ ಮನವಿ ಸ್ವೀಕರಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು,ಈ ಕುರಿತು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದೇ ವೇಳೆ ರೈತರು ಮಾತನಾಡಿ, ಗ್ರಾಮದ ಮಧ್ಯೆ ರಿಂಗ್ ರೋಡ್ ನಿರ್ಮಾಣಕ್ಕಾಗಿ ರೈತರ ಕೃಷಿ ಭೂಮಿಯನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳುತ್ತಿದೆ. ಈ ಜಮೀನಿನಲ್ಲಿಯೇ ಹಲವು ವರ್ಷಗಳಿಂದ ವ್ಯವಸಾಯ ಮಾಡಿಕೊಂಡು ಬರುತ್ತಿದ್ದೇವೆ. ಆದರೆ, ಅಧಿಕಾರಿಗಳು, ಗುತ್ತಿಗೆದಾರರು ನಮ್ಮ ಜಮೀನಲ್ಲಿ ರಿಂಗ್ ರೋಡ್ ಮಾಡಲು ಹೋರಟಿದ್ದು, ನಮಗೆ ಜೀವನ ನಡೆಸಲು ತೊಂದರೆ ಆಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಎದುರು ಅಳಲು ತೋಡಿಕೊಂಡರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್, ಕಡೋಲಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಪಂ ಸದಸ್ಯರು ಸೇರಿದಂತೆ ಬೆನ್ನಾಳಿ, ದೇವಗಿರಿ, ಅಗಸಗಾ, ಅಂಬೇವಾಡಿ ಗ್ರಾಮದ ರೈತರು ಉಪಸ್ಥಿತರಿದ್ದರು.
CKNEWSKANNADA / BRASTACHARDARSHAN CK NEWS KANNADA