ಬೆಳಗಾವಿ, ಆ.7(ಕರ್ನಾಟಕ ವಾರ್ತೆ): “ಬೆಳಗಾವಿ ನಗರವು ರಾಜ್ಯದಲ್ಲಿ ಶರವೇಗದಲ್ಲಿ ಅಭಿವೃದ್ಧಿಯಾಗುತ್ತಿದೆ. ಉದ್ಯಮ, ವಸತಿ ಸೇರಿದಂತೆ ಎಲ್ಲ ರೀತಿಯಿಂದಲೂ ಬೆಳವಣಿಗೆಯಾಗುತ್ತಿದ್ದು, ಇದಕ್ಕೆ ಪೂರಕವಾಗಿ ನೀರು-ವಿದ್ಯುತ್ ಸೇರಿದಂತೆ ಎಲ್ಲ ರೀತಿಯ ಮೂಲಸೌಕರ್ಯವನ್ನು ಒದಗಿಸಲು ಸರಕಾರ ಬದ್ಧವಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಮಚ್ಛೆ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಸೋಮವಾರ (ಆ.7) 260 ಕೋಟಿ ರೂಪಾಯಿ ವೆಚ್ಚದ 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬಹು ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಅನೇಕ ಕೆಲಸಗಳು ಆಗಬೇಕಿದೆ. ಪಕ್ಷಭೇದವನ್ನು ಮರೆತು ಎಲ್ಲರೂ ಸೇರಿ ಪ್ರಯತ್ನಿಸಿದರೆ ಬೆಳಗಾವಿಯ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದರು.
ಗುಣಮಟ್ಟದ ವಿದ್ಯುತ್ ಪೂರೈಕೆಗೆ ಅನುಕೂಲ:
ಈ ಭಾಗದ ಕೈಗಾರಿಕೋದ್ಯಮಿಗಳ ಬಹುದಿನಗಳ ಬೇಡಿಕೆಯ ಪ್ರಕಾರ 220 ಕೆ.ವಿ. ಹೊಸ ವಿದ್ಯುತ್ ಕೇಂದ್ರದ ನಿರ್ಮಾಣ ಮಾಡಲಾಗುತ್ತಿದೆ. ಉದ್ಯಮಗಳಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಕೆ ಅಗತ್ಯವಿರುವುದರಿಂದ ಈ ಕೇಂದ್ರವು ಅನುಕೂಲವಾಗಲಿದೆ.
ಆದಷ್ಟು ಬೇಗನೇ ಕಾಮಗಾರಿಯನ್ನು ಪೂರ್ಣಗೊಳಿಸಿ ಕೈಗಾರಿಕೆಗಳಿಗೆ ವಿದ್ಯುತ್ ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.
ಸದ್ಯಕ್ಕಿರುವ ಜಾಗೆಯಲ್ಲಿ 220 ಕೆ.ವಿ. ಕೇಂದ್ರ ನಿರ್ಮಾಣ ಮಾಡಲಾಗುತ್ತಿದ್ದು, 39 ಕಿ.ಮೀ. ಉದ್ದದ ಬಹು ವಿದ್ಯುತ್ ಪ್ರಸರಣ ಮಾರ್ಗವನ್ನು ನಿರ್ಮಿಸಲು ಉದ್ಧೇಶಿಸಲಾಗಿರುತ್ತದೆ.
250 ಕೋಟಿ ರೂಪಾಯಿ ವೆಚ್ಚದ ಯೋಜನೆ ಇದಾಗಿದೆ. ಈ ಭಾಗದ ಕೈಗಾರಿಕೆಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಸಲು ಅನುಕೂಲವಾಗಲಿದೆ.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಅಭಯ್ ಪಾಟೀಲ ಅವರು, ಈ ವಿದ್ಯುತ್ ಕೇಂದ್ರದ ನಿರ್ಮಾಣದಿಂದ ಕೈಗಾರಿಕೆಗಳಿಗೆ ಉತ್ತೇಜನ ದೊರಕಲಿದೆ ಎಂದರು.
ಮುಂಬರುವ ದಿನಗಳಲ್ಲಿ 400 ಕೆ.ವಿ. ವಿದ್ಯುತ್ ಕೇಂದ್ರದ ಅಗತ್ಯವಿದ್ದು, ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಬೇಕಿದೆ. ಈ ಸರಕಾರದಲ್ಲಿ ಅದು ಕೈಗೂಡಲಿದೆ ಎಂದು ಆಶಯ ವ್ಯಕ್ತಪಡಿಸಿದರು.
ಶಾಸಕ ಆಸೀಫ್(ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಹೆಸ್ಕಾಂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
*****