ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಬೇಕು’ ಎಂದು ಆಗ್ರಹಿಸಿ ಉತ್ತರ ಕರ್ನಾಟಕ ವಿಕಾಸ ವೇದಿಕೆ ನೇತೃತ್ವದಲ್ಲಿ ಮುಖಂಡರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಹಾಗೂ ಕಪ್ಪು ಮಾಸ್ಕ್ ಧರಿಸಿ ಸುವರ್ಣ ವಿಧಾನಸೌಧ ಬಳಿಯ ಸರ್ವಿಸ್ ರಸ್ತೆಯಲ್ಲಿ ಸೋಮವಾರ ಧರಣಿ ನಡೆಸಿದರು.
ಮುಖಂಡ ಅಶೋಕ ಪೂಜಾರಿ ಮಾತನಾಡಿ, ‘ರಾಜ್ಯಮಟ್ಟದ ಪ್ರಮುಖ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸದೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ. ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿಲ್ಲ. ಇದು ಖಂಡನೀಯ. ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಲು ಈ ವಿಷಯವನ್ನು ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸಬೇಕು’ ಎಂದು ಒತ್ತಾಯಿಸಿದರು.
‘ಉತ್ತರ ಕರ್ನಾಟಕದ ಮಠಾಧೀಶರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಗಮನಸೆಳೆದಿದ್ದೆವು.
ಆದರೆ, ಸರ್ಕಾರದ ಉದಾಸೀನ ಮನೋಭಾವ ಹಾಗೂ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಈ ಭಾಗದ ಜನರ ನೋವಿಗೆ ಸ್ಪಂದನೆ ದೊರೆತಿಲ್ಲ’ ಎಂದು ದೂರಿದರು.
‘ಸರ್ಕಾರವು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಬೆಂಗಳೂರಿನಲ್ಲಿರುವ ಪ್ರಮುಖ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸಬೇಕು’ ಎಂದು ಆಗ್ರಹಿಸಿದರು.
ರೈತ ಮುಖಂಡ ಕಲ್ಯಾಣರಾವ ಮುಚಳಂಬಿ ಇದ್ದರು.