ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಆ ರಾಜ್ಯಗಳಿಂದ ಬರುವ ವಾಹನಗಳನ್ನು ತಡೆದು ಕೋವಿಡ್ ನೆಗೆಟಿವ್ ಪ್ರಮಾಣಪತ್ರ (ಆರ್‌ಟಿಪಿಸಿಆರ್) ಕೇಳಲಾಗುತ್ತಿದೆ. ಇರುವವರಿಗೆ ಮಾತ್ರವೇ ಪ್ರವೇಶ ನೀಡಲಾಗುತ್ತಿದೆ. ಇಲ್ಲವಾದಲ್ಲಿ ವಾಪಸ್ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕಾಗವಾಡ ಹಾಗೂ ಕೊಗನೋಳ್ಳಿ ಚೆಕ್‌ಪೋಸ್ಟ್‌ನಲ್ಲಿ ಬುಧವಾರ ನಸುಕಿನಲ್ಲಿ ಕೆಲವು ಖಾಸಗಿ ಬಸ್‌ಗಳನ್ನು ವಾಪಸ್ ಕಳುಹಿಸಲಾಗಿದೆ. ಅವರ ಬಳಿ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಇರಲಿಲ್ಲ. ಅಂತೆಯೇ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿನ ಪ್ರಯಾಣಿಕರಿಂದಲೂ ಮಾಹಿತಿ ಪಡೆಯಲಾಗುತ್ತಿದೆ.
ಪ್ರಯಾಣಿಕರ ಬಳಿ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಇದೆಯೇ ಎನ್ನುವುದನ್ನು ಪರಿಶೀಲಿಸುವಂತೆ ಚಾಲಕರು ಹಾಗೂ ನಿರ್ವಾಹಕರಿಗೆ ಸೂಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಡಿವೈಎಸ್ಪಿ ಮನೋಜ ಕುಮಾರ ಹಾಗೂ ಸಿಪಿಐ ಸಂಗಮೇಶ ಶಿವಯೋಗಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.