ಬೆಳಗಾವಿ : ಡಿ. ೧೦ ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಲಾಯಿತು.
ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರುಗಳು ಪಾಲ್ಗೊಂಡು ವಿಧಾನ ಪರಿಷತ್ ಚುನಾವಣೆಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.
ಮೂರನೇ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸಲು ಎಲ್ಲ ಬಿಜೆಪಿ ಮುಖಂಡರುಗಳು ಒಂದಾಗಿ ಶ್ರಮಿಸಬೇಕು. ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲೇಬೇಕು. ಇದಕ್ಕಾಗಿ ಕಾರ್ಯಕರ್ತರು ಬಿಜೆಪಿ ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸುವಂತೆ ಈ ಸಭೆಯಲ್ಲಿ ಮನವರಿಕೆ ಮಾಡಲಾಯಿತು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಹಾಂತೇಶ ಕವಟಗಿಮಠ ಅವರು ವಿಧಾನ ಪರಿಷತ್ ಸದಸ್ಯರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಇವರ ಆಯ್ಕೆಗೆ ಎಲ್ಲ ಕಾರ್ಯಕರ್ತರು ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ಕೆಲಸ ನಿರ್ವಹಿಸುವಂತೆ ಸೂಚಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.