Breaking News

ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ


ಮೂಡಲಗಿ : ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು.

ಸೋಮವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗರೀಕರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಅವಳಿ ತಾಲೂಕುಗಳಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ ಪ್ರಸಕ್ತ ಸನ್ನಿವೇಶದಲ್ಲಿ ಇಳಿಮುಖವಾಗಿದ್ದರೂ ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಳವಾಗಬಹುದು. ಇದರಿಂದ ನಾಗರೀಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗದಂತೆ ಈಗಿನಿಂದಲೇ ಅವಶ್ಯಕವಾಗಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ಮತ್ತು ಎರಡನೇ ಲಸಿಕೆ ಹಾಕುವ ಕಾರ್ಯಕ್ರಮ ಮುಂದುವರೆದಿದ್ದು, ಎರಡೂ ಲಸಿಕೆ ಹಾಕುವ ಅಭಿಯಾನವನ್ನು ಶೇ 100 ರಷ್ಟು ಯಶಸ್ವಿ ಮಾಡುವಂತೆ ಸೂಚನೆ ನೀಡಿದರು.

 

ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು. ಸಂಭವನೀಯ ಮೂರನೇ ಅಲೆ ಎದುರಿಸಲಿಕ್ಕೆ ಕ್ರಮ ಕೈಗೊಳ್ಳಬೇಕು. ಒಂದು ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಕೆಲಸ ಮಾಡಿದಂತೆ ಸಂಭವನೀಯ ಮೂರನೇ ಅಲೆಯನ್ನು ಯಶಸ್ವಿಗೊಳಿಸಲು ಎಲ್ಲ ಅಧಿಕಾರಿಗಳು ಆರೋಗ್ಯ ಇಲಾಖಾಧಿಕಾರಿಗಳೊಂದಿಗೆ ಕೈ ಜೋಡಿಸಬೇಕು. ಹೆಚ್ಚು ಜಾಗೃತರಾಗಿ ಕರ್ತವ್ಯ ನಿರ್ವಹಿಸಬೇಕು. ಸ್ಥಳೀಯ ಮಟ್ಟದಲ್ಲಿ ಟಾಸ್ಕ್‍ಫೋರ್ಸ್ ಕಮೀಟಿಯವರು ಆಗಾಗ ಸಭೆಗಳನ್ನು ನಡೆಸಬೇಕು.

ಪಿಡಿಓ, ಗ್ರಾಮ ಲೆಕ್ಕಾಧಿಕಾರಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಕೋರೋನಾ ವಾರಿಯರ್ಸ್‍ಗಳು ಸಾರ್ವಜನಿಕರಲ್ಲಿ ಈ ಬಗ್ಗೆ ಜನ ಜಾಗೃತಿ ಮೂಡಿಸುವ ಕೆಲಸ ನಿರ್ವಹಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾರಾಂತ್ಯ ಕಫ್ರ್ಯೂ ಸಮಯದಲ್ಲಿ ನಾಗರೀಕರು ಅನಾವಶ್ಯಕವಾಗಿ ಹೊರಗೆ ಓಡಾಡದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು.

ಸೋಂಕಿತರು ಉಪಚಾರಕ್ಕಾಗಿ ಈಗಾಗಲೇ ಗೋಕಾಕದಲ್ಲಿ 100, ಮಲ್ಲಾಪೂರ ಪಿಜಿಯಲ್ಲಿ 40 ಮತ್ತು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ 17 ಆಕ್ಷಿಜನ್ ಸಹಿತ ಬೆಡ್‍ಗಳನ್ನು ವ್ಯವಸ್ಥೆ ಮಾಡಲಾಗಿದೆ. ಒಟ್ಟಿನಲ್ಲಿ ಕೋರೋನಾ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ತಾಲೂಕಾಡಳಿತ ಸಿದ್ಧತೆ ನಡೆಸಿಕೊಳ್ಳಬೇಕು. ಈಗಾಗಲೇ 15 ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ಕೋರೋನಾ ಲಸಿಕೆ ಕಾರ್ಯಕ್ರಮ ಮುಕ್ತಾಯ ಹಂತ ತಲುಪಿದೆ ಎಂದು ಅವರು ಹೇಳಿದರು.

ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜನೀಯರಿಂಗ್ ಇಲಾಖೆಯಿಂದ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಗತ್ಯವಿರುವ ರಸ್ತೆ ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳಬೇಕು. ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಅಧಿಕಾರಿಗಳು ಸ್ಥಳಕ್ಕೆ ಧಾವಿಸಬೇಕು. ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೌಜಲಗಿಯಿಂದ ಕಳ್ಳಿಗುದ್ದಿ ಮತ್ತು ತಿಮ್ಮಾಪೂರ ಕ್ರಾಸದಿಂದ ಅವರಾದಿ ಗ್ರಾಮದವರೆಗಿನ ರಸ್ತೆ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚನೆ ನೀಡಿದರು.

ಕೌಜಲಗಿ ಮತ್ತು ಸುತ್ತಮುತ್ತಲಿನ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಲೋಕಾರ್ಪಣೆ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ಫೆಬ್ರುವರಿ ತಿಂಗಳಲ್ಲಿ ರೈತರ ಬಹು ನಿರೀಕ್ಷಿತ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿಗಳು ಹಾಗೂ ಸಣ್ಣ ನೀರಾವರಿ ಸಚಿವರ ಉಪಸ್ಥಿತಿಯಲ್ಲಿ ರೈತರಿಗೆ ಅರ್ಪಿಸಲಾಗುವುದು ಎಂದು ಹೇಳಿದರು.

ಮೂಡಲಗಿ ಪುರಸಭೆಗೆ ನಗರೋತ್ಥಾನ ಯೋಜನೆಯಡಿ 10 ಕೋಟಿ, ಅರಭಾವಿ, ನಾಗನೂರ ಮತ್ತು ಕಲ್ಲೋಳಿ ಪಟ್ಟಣ ಪಂಚಾಯತಿಗಳಿಗೆ ತಲಾ 5 ಕೋಟಿ ರೂ.ಗಳ ಅನುದಾನ ಸರಕಾರದಿಂದ ಬಿಡುಗಡೆಯಾಗಬೇಕಿದೆ. ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗೆ ಗಮನ ನೀಡಬೇಕು. ಅಲ್ಲದೇ ಆದ್ಯತೆ ಆಧಾರದ ಮೇಲೆ ಕ್ರಿಯಾ ಯೋಜನೆಯನ್ನು ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣ ಹಾಗೂ ಹೈಟೆಕ್ ಬಸ್ ನಿಲ್ದಾಣಕ್ಕೆ ಅಗತ್ಯವಿರುವ ನಿವೇಶನಗಳನ್ನು ನೀಡುವಂತೆ ಪುರಸಭೆಗೆ ಸೂಚಿಸಿದರು.
ನೆರೆ ಸಂದರ್ಭದಲ್ಲಿ ಬೆಳೆ ಹಾನಿಗೊಳಗಾದ ರೈತರ ಖಾತೆಗಳಿಗೆ ಕೂಡಲೇ ಪರಿಹಾರ ಮೊತ್ತವನ್ನು ಜಮೆ ಮಾಡಿಸಬೇಕು. ಈಗಾಗಲೇ ಕೃಷಿ ಇಲಾಖೆಯಿಂದ ರೈತರಿಗೆ 6 ಕೋಟಿ ರೂ.ಗಳಷ್ಟು ಪರಿಹಾರ ಮೊತ್ತವನ್ನು ಅವರ ಖಾತೆಗಳಿಗೆ ಜಮಾ ಮಾಡಿಸಲಾಗಿದೆ. ರೈತರಿಗೆ ಸಮರ್ಪಕ ವಿದ್ಯುತ್ ನೀಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮೂಡಲಗಿ ತಹಶೀಲ್ದಾರ ಡಿ.ಜೆ. ಮಹಾತ, ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಗೋಕಾಕ ತಾಪಂ ಇಓ ಮುರಳೀಧರ ದೇಶಪಾಂಡೆ, ಗೋಕಾಕ ತಾಲೂಕಾ ಆರೋಗ್ಯಾಧಿಕಾರಿ(ಪ್ರ) ಡಾ.ರವೀಂದ್ರ ಅಂಟೀನ್, ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ, ಬಿಇಓ ಅಜೀತ ಮನ್ನಿಕೇರಿ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ನಿವೃತ್ತ ತಾಲೂಕಾ ಆರೋಗ್ಯಾಧಿಕಾರಿ ಡಾ.ಆರ್.ಎಸ್. ಬೆಣಚಿನಮರಡಿ ಸೇರಿದಂತೆ ಅವಳಿ ತಾಲೂಕುಗಳ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ರೈತರ ಖಾತೆಗಳಿಗೆ ಪರಿಹಾರವನ್ನು ಜಮೆ ಮಾಡಿ; ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ : ಕಳೆದ ಆಗಷ್ಟ್ ತಿಂಗಳಲ್ಲಿ ಸಂಭವಿಸಿದ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೀಡಾಗಿರುವ ರೈತರ ಬೆಳೆಗಳಿಗೆ ಪರಿಹಾರ ಮೊತ್ತವನ್ನು ವಿತರಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ