*ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ*
ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ 25 ರ ಮಿತಿಗೆ ಒಳಪಟ್ಟು ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಸರ್ವಋತು ಸಂಪರ್ಕ ರಸ್ತೆಗಳಾಗಿ ಅಭಿವೃದ್ಧಿಪಡಿಸುವಂತೆ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಆದ್ಯತೆಯ ಮೇರೆಗೆ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲು ಘೋಷಣೆ ಮಾಡಲಾಗಿದ್ದು, ಆರ್ಡಿಪಿಆರ್ ಆಯುಕ್ತರು ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ತೋಟದ ರಸ್ತೆ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಲು ಅನುಮತಿ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳನ್ನು ಇತ್ತೀಚೆಗೆ ಕೋರಿದ್ದರು ಎಂಬುದು ಉಲ್ಲೇಖಾರ್ಹ.
*ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ :* ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಈಗಾಗಲೇ ಸರ್ಕಾರ ಆದೇಶಿಸಿದ್ದು, ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಇಲ್ಲಿಯವರೆಗೆ ನರೇಗಾ ಯೋಜನೆಯಡಿ ತೋಟದ ರಸ್ತೆಗಳ ನಿರ್ಮಾಣಕ್ಕೆ ಅನುಮತಿ ನೀಡಿರಲಿಲ್ಲಾ. ಇತ್ತೀಚೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಿನ ತೋಟದ ರಸ್ತೆಗಳನ್ನು ನರೇಗಾ ಯೋಜನೆಗೆ ಒಳಪಡಿಸಿ ಕಾಮಗಾರಿಗೆ ಅನುಮತಿ ನೀಡುವಂತೆ ಕೋರಿಕೊಂಡಿದ್ದೆ. ಅದರಂತೆ ಮುಖ್ಯಮಂತ್ರಿಗಳು ಈ ಕಾಮಗಾರಿ ನಿರ್ವಹಿಸಲು ಅನುಮತಿ ನೀಡಿದ್ದಾರೆ. ಆದ್ದರಿಂದ ಎಲ್ಲ ಗ್ರಾಮ ಪಂಚಾಯತ ಸದಸ್ಯರುಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ರೈತಾಪಿ ವರ್ಗಕ್ಕೆ ಅನುಕೂಲ ಮಾಡಿಕೊಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೂಚನೆ ನೀಡಿದ್ದಾರೆ.