ನವ ದೆಹಲಿ, ಜು. 17: ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. “2023ರಲ್ಲಿ ನಡೆಯುವ ಕರ್ನಾಟಕ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ” ಎಂದು ನಡ್ಡಾ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಮಾಹಿತಿ ಕೊಟ್ಟಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ಕೊಡುವ ಪ್ರಶ್ನೆಯನ್ನು ತಳ್ಳಿ ಹಾಕಿದರು.
“ನನಗೆ ರಾಜೀನಾಮೆ ಕೊಡುವಂತೆ ಯಾರೂ ಸೂಚಿಸಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಹೊಣೆ ನನ್ನ ಮೇಲಿದೆ. ನನ್ನ ಶ್ರಮದ ಬಗ್ಗೆ ಪಕ್ಷದ ವರಿಷ್ಠರು ಮೆಚ್ಚುಗೆ ಸೂಚಿಸಿದ್ದಾರೆ. ಇನ್ಮೇಲೆ ತಿಂಗಳಿಗೊಮ್ಮೆ ದೆಹಲಿ ಪ್ರವಾಸ ಮಾಡುತ್ತೇನೆ. ವರಿಷ್ಠರ ಸೂಚನೆಯಂತೆ ಪಕ್ಷ ಸಂಘಟನೆ ಹಾಗೂ ಅಭಿವೃದ್ಧಿ ಪರ ಸರ್ಕಾರ ನಡೆಸುವೆ” ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ಕೊಟ್ಟಿದ್ದಾರೆ.
ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ರಾಜನಾಥ್ ಸಿಂಗ್ ನಿವಾಸದಲ್ಲಿ ಇಬ್ಬರೂ ನಾಯಕರು ಚರ್ಚೆ ಮಾಡುತ್ತಿದ್ದಾರೆ. ನಿನ್ನೆ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಡಿಯೂರಪ್ಪ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದರು.
ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ?: ಅನಾರೋಗ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜೀನಾಮೆ ಕೊಡುವಂತೆ ಹೈಕಮಾಂಡ್ ಸೂಚಿಸಿರುವುದಾಗಿ ಪ್ರಧಾನಿ ಸಚಿವಾಲಯದ ಮೂಲಗಳು ತಿಳಿಸಿವೆ ಎಂದು ಖಾಸಗಿ ಸುದ್ದಿ ವಾಹಿನಿ ಎನ್‌ಡಿಟಿವಿ ವರದಿ ಮಾಡಿದೆ. ಇದೇ ಜುಲೈ 26ಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡು ವರ್ಷಗಳ ಅವಧಿ ಪೂರೈಸಲಿದ್ದಾರೆ. ಅದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
CKNEWSKANNADA / BRASTACHARDARSHAN CK NEWS KANNADA