ಬೆಳಗಾವಿ: ಹಿರೇಬಾಗೆವಾಡಿಯ ಪೊಲೀಸ್ ಠಾಣಾ ವ್ಯಾಪ್ತಿಯ ಸುವರ್ಣಸೌಧದ ಬಳಿ ಕೆಲವು ಸಂಘ-ಸಂಸ್ಥೆಯವರು ಪ್ರತಿಭಟನಾಕಾರರು ಸಣ್ಣಪುಟ್ಟ ವಿಷಯಕ್ಕೆ ಪದೆ ಪದೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ ಮಾಡುತಿದ್ದು, ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದನ್ನು ತಡೆಗಟ್ಟಲು ಸುವರ್ಣಸೌಧದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.
ನ.24 ರಂದು 7 ಗಂಟೆಯಿಂದ ಜ.24-2021 ರಂದು ಮಧ್ಯರಾತ್ರಿಯವರೆಗೆ ಜಾರಿಗೆ ಬರುವಂತೆ ಸಿ.ಆರ್.ಪಿ.ಸಿ. 1973 ರ ಕಲಂ 144ರ ಮೇರೆಗೆ ಈ ಕೆಳಕಂಡ ಷರತ್ತುಗಳನ್ನು ವಿಧಿಸಿ ಸುವರ್ಣ ಸೌಧದ ಸುತ್ತಲಿನ ಆವರಣದಿಂದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಹೊರಡಿಸಿರುತ್ತಾರೆ.
ಪ್ರತಿಭಟನೆಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಮೇಲೆ ಲಘು ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿದ್ದು ಅಪಘಾತಗಳು ಕೂಡ ಸಂಭವಿಸುತ್ತಿವೆ. ಆದ್ದರಿಂದ ಇವುಗಳನ್ನು ನಿಯಂತ್ರಿಸುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ
ನಗರದ ಸುರ್ವಣ ಸೌಧದ ಸುತ್ತಲಿನ ಆವರಣದಿಂದ 500 ಮೀಟರ್ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ (ಸರ್ಕಾರಿ ಸಭೆ-ಸಮಾರಂಭ ಹೊರತುಪಡಿಸಿ) ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.
ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಕಲ್ಲುಗಳನ್ನು, ಕ್ಷಾರಪದಾರ್ಥ, ಪಟಾಕಿ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಅಥವಾ ಬಿಡುವ ಸಾಧನಗಳನತ್ನು ತೆಗೆದುಕೊಂಡು ಹೋಗುವುದನ್ನು ಪ್ರತಿಬಂಧಿಸಲಾಗಿದೆ.
ಸುರ್ವಣ ಸೌಧದ ಸುತ್ತಲಿನ ಆವರಣದಿಂದ 500 ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು ಹಾಡುವದನ್ನು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ.
ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.