ನವದೆಹಲಿ, ಜು.7- ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಪುನಾರ್ರಚನೆಯಾಗುವ ಹಿನ್ನೆಲೆಯಲ್ಲಿ ಕಾರ್ಮಿಕ ಸಚಿವರಾಗಿದ್ದ ಸಂತೋಷ್ ಗಂಗ್ವಾರ್, ಶಿಕ್ಷಣ ಸಚಿವ ರಮೇಶ್ ಪೊಕ್ರಿಯಾಲ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ದಿಬೇಶ್ರೀ ಚೌದರಿ ಸೇರಿದಂತೆ ಹಲವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿವಿ ಸದಾನಂದ ಗೌಡ ಅವರೂ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಥಾವರ್ ಚಂದ್ ಗೆಹ್ಲೋಟ್ರನ್ನು ನಿನ್ನೆ ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿತ್ತು. ಇಂದು ಅವರು ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಕಾರ್ಮಿಕ ಇಲಾಖೆಯ ಸ್ವತಂತ್ರ ಪ್ರಭಾರದ ಜವಾವ್ದಾರಿ ನಿರ್ವಹಿಸುತ್ತಿದ್ದ ಸಂತೋಷ್ ಗಂಗ್ವಾರ್ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಾವು ರಾಜೀನಾಮೆ ನೀಡಿರುವುದನ್ನು ಖಚಿತ ಪಡಿಸಿರುವ ಸಂತೋಷ್ ಅವರು ಮುಂದಿನ ದಿನಗಳಲ್ಲಿ ತಮಗೆ ಹೊಸದಾಗಿ ಯಾವ ಜಬಾಬ್ದಾರಿ ನೀಡಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದ ದಿಬೇಶ್ರೀ ಚೌದರಿ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಜೆ ನಡೆಯುವ ಸಂಪುಟ ಪುನಾರ್ರಚನೆಯಲ್ಲಿ 35 ಕ್ಕೂ ಹೆಚ್ಚು ಮಂದಿ ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
CKNEWSKANNADA / BRASTACHARDARSHAN CK NEWS KANNADA