ಬೆಂಗಳೂರು,ಜು.13- ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಕೊಡಗು, ಶಿವಮೊಗ್ಗ, ಕಲಬುರಗಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಒಟ್ಟು 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ ಒಂದು ವಾರದ ಬಿಡುವಿನ ನಂತರ ರಾಜ್ಯದಲ್ಲಿ ನೈಋತ್ಯ ಮುಂಗಾರು ಆರಂಭಗೊಂಡಿದೆ. ಅನೇಕ ಕಡೆ ಸಾಧಾರಣ ಮಳೆಯಾಗುತ್ತಿದ್ದು, ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಪ್ರಾರಂಭವಾಯಿತು. ಬೆಳಗ್ಗೆ ಕೆಲಸಕ್ಕೆ ಹೋಗುವವರಿಗೆ ಮಳೆ ಅಡಚಣೆಯಾಯಿತು. ಹಲವೆಡೆ ಟ್ರಾಫಿಕ್ ಜಾಮ್ಗೂ ಕಾರಣವಾಯಿತು.
ಕರಾವಳಿ, ಮಲೆನಾಡು ಉತ್ತರ ಕನ್ನಡ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ದಕ್ಷಿಣ ಕನ್ನಡದ ವಿವಿಧ ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ.
ಉಲ್ಲಾಳ, ಸೋಮೇಶ್ವರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಮುದ್ರದಲ್ಲಿ ಪ್ರತಿಕೂಲ ಹವಾಮಾನವಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಹಾವೇರಿ, ಕಲಬುರಗಿಯಲ್ಲೂ ಹಲವೆಡೆ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಹೊಸಪೇಟೆ ಪಟ್ಟಣ, ಹಂಪಿ, ವಿಜಯನಗರ ಜಿಲ್ಲೆಯ ಹಲವು ಭಾಗಗಳಲ್ಲೂ ಸಹ ಭಾರೀ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಲ್ಲಿ ಜು.16ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.