ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿದ್ದು, ವಿಪರೀತ ಹಾನಿ ಸಂಭವಿಸಿದೆ. ಈ ಕುರಿತು ಚರ್ಚಿಸಲು *ನಾಳೆ ಉನ್ನತ ಮಟ್ಟದ ಸಭೆ* ಕರೆದಿರುವುದಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಲಸಂಪನ್ಮೂಲ ಸಚಿವ *ಶ್ರೀ ರಮೇಶ್ ಜಾರಕಿಹೊಳಿ* ತಿಳಿಸಿದ್ದಾರೆ.
“ಬೆಳಗಾವಿ ಜಿಲ್ಲೆಯ ಮಳೆಯ ಹಾನಿಯ ಕುರಿತು ಈಗಾಗಲೇ ಅಧಿಕಾರಿಗಳಿಂದ ವರದಿ ಪಡೆದಿದ್ದೇನೆ. ನಾಳೆ ಸಭೆ ಕರೆದು ಚರ್ಚಿಸುತ್ತೇನೆ. ಕಲಬುರಗಿ ಭಾಗದಲ್ಲಿ ಹೆಚ್ಚಿನ ಮಳೆಯಾಗಿದ್ದು, ಹಾನಿ ಕುರಿತ ಪರಿಶೀಲನೆಗೆ ಅಧಿಕಾರಿಗಳ ತಂಡವನ್ನು ಕಳಿಸಿದ್ದೇವೆ. ವರದಿ ಬಂದ ಮೇಲೆ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಹುಕ್ಕೇರಿಗೂ ಈಗಾಗಲೇ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಾಳೆ ಸಭೆ ಕರೆದು ವಾಸ್ತವ ಸ್ಥಿತಿ ಬಗ್ಗೆ ಮಾಹಿತಿ ಪಡೆಯುವೆ” ಎಂದು ಸಚಿವ ಜಾರಕಿಹೊಳಿ ಹೇಳಿದರು.
ಮಹಾರಾಷ್ಟ್ರದಲ್ಲಿ ಮತ್ತೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಕೃಷ್ಣಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಆದ ಮಳೆಯಿಂದ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು. ಪ್ರವಾಹ ಪರಿಸ್ಥಿತಿ ಎದುರಿಸಲು ಬೋಟ್‌ಗಳ ವ್ಯವಸ್ಥೆ ಸೇರಿ ಮುನ್ನೆಚ್ಚರಿಕೆ ಕ್ರಮ ಅನುಸರಿಸುವ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಆಲಮಟ್ಟಿಯಿಂದ ನೀರು ಬಿಡುಗಡೆಗೆ ವ್ಯವಸ್ಥೆ ಮಾಡಲಾಗಿದೆ. ನಾರಾಯಣಪುರ ಜಲಾಶಯದಿಂದ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಆಲಮಟ್ಟಿ ಭಾಗದಲ್ಲಿ ಮಳೆಯ ಪ್ರಮಾಣ ತಗ್ಗಿದ ಬಗ್ಗೆ ವರದಿ ಇದೆ ಎಂದರು.
ಮಹಾರಾಷ್ಟ್ರದ ಸಿಂಧನೂರು, ರತ್ನಾಗಿರಿ ಭಾಗದಲ್ಲಿ ಮಳೆ ಜಾಸ್ತಿ ಇದೆ. ಹೀಗಾಗಿ ಚಿಕ್ಕೋಡಿ ಭಾಗದಲ್ಲಿ ಕೃಷ್ಣಾ ನದಿ ತೀರದಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ಕೊಟ್ಟಿದ್ದೇನೆ. ಪ್ರತಿ ಗಂಟೆಗೊಮ್ಮೆ ಮಹಾರಾಷ್ಟ್ರದ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಮಳೆಯ ಪ್ರಮಾಣ ಜಾಸ್ತಿ ಆದರೆ ಎಚ್ಚರಿಕೆಯಿಂದ ಇರಲು ಸೂಚನೆ ಕೊಟ್ಟಿದ್ದೇವೆ. ತಹಶೀಲ್ದಾರ್, ಪೊಲೀಸರ ಮೂಲಕ ಜನರಿಗೆ ತಿಳಿವಳಿಕೆ ನೀಡಲಾಗುತ್ತಿದೆ ಎಂದು ರಮೇಶ್ ಜಾರಕಿಹೊಳಿ ಮಾಹಿತಿ ನೀಡಿದರು.