ಗೋಕಾಕ: “ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು” ಎಂದು ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹಿಸಿದರು.
ನಗರದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೋವಿಡ್ ನಿಂದಾಗಿ ಜನರು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈಗ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗುತ್ತದೆ. ಹೀಗಾಗಿ, ಕೂಡಲೇ ತೈಲ ಬೆಲೆ ಇಳಿಕೆ ಮಾಡಬೇಕು” ಎಂದು ಒತ್ತಾಯಿಸಿದರು.
“ರೈತ ವಿರೋಧಿ ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ ಮೂರು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರಿಗೆ ಮಾರಕವಾಗಿರುವ ನೂತನ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು” ಎಂದು ಆಗ್ರಹಿಸಿದರು.
ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಈ ಸಂದರ್ಭದಲ್ಲಿ ಹಾಜರಿದ್ದರು.