ಸವದತ್ತಿ : ‘ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಪಕ್ಷ ಅವಕಾಶ ಮಾಡಿ ಕೊಟ್ಟಿದೆ. ಈ ಚುನಾವಣೆ ಸವಾಲ್ ಆಗಿದೆ, ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು.
ತಾಲ್ಲೂಕಿನ ಮಬನೂರ ಮತ್ತು ಬೆನಕಟ್ಟಿ ಗ್ರಾಮದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಸಕ್ರಿಯವಾಗಿ ಪ್ರಚಾರದಲ್ಲಿ ಪಾಲ್ಗೊಳ್ಳಿ. ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಿಬೇಕು. ಕೈ ಅಭ್ಯರ್ಥಿ ಗೆಲ್ಲಲು ಒಳ್ಳೆಯ ಅವಕಾಶ’ ಎಂದರು.
‘ ಬೆಳಗಾವಿ ಲೋಕಸಭಾ ಮತಕ್ಷೇತ್ರ ಉಪಚುನಾವಣೆ ಕಾಂಗ್ರೆಸ್ ಕಾರ್ಯಕರ್ತರು ಮಾಡುವಂತ ಚುನಾವಣೆ. ಎಷ್ಟು ಆಸಕ್ತಿಯಿಂದ ಕೆಲಸ ಮಾಡುತ್ತಿರೋ, ಅಷ್ಟು ಚುನಾವಣೆಗೆ ಅನುಕೂಲವಾಗಲಿದೆ’ ಎಂದರು.
‘ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಯಾವ ರೀತಿ ಆಡಳಿತ ನಡೆಸುತ್ತಿವೆ ಎನ್ನುವುದು ನಿಮ್ಮೆಲ್ಲರಿಗೂ ಗೊತ್ತಿರುವ ವಿಚಾರ. ಈ ಬಾರಿ ಚುನಾವಣೆ ಎಚ್ಚರಿಕೆ ಗಂಟೆಯಾಗಬೇಕು. ಸಕಾಲದಲ್ಲಿ ಬಂದಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು’ ಎಂದು ಹೇಳಿದರು.
ಇದಕ್ಕೂ ಮೊದಲು ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿ ಮಾಡಿ, ಶಾಸಕ ಸತೀಶ್ ಜಾರಕಿಹೊಳಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಇದೇ ವೇಳೆ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಪಂಚನಗೌಡ ದ್ಯಾಮನಗೌಡ, ವಿಶ್ವಾಸ ವೈದ್ಯ, ಉಮೇಶ್ ಬಾಳಿ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.