ಬೆಳಗಾವಿ: “ಅಗತ್ಯ ವಸ್ತುಗಳ ಬೆಲೆ ಏರಿಕೆಯ ಮೂಲಕ ಕೇಂದ್ರ ಸರ್ಕಾರ ಬಡವರ ಜೀವನಕ್ಕೆ ಬರೆ ಎಳೆದಿದೆ” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಮದುರ್ಗ ವಿಧಾನಸಭಾ ಮತಕ್ಷೇತ್ರದ ಚುಂಚನೂರ ಗ್ರಾಮದಲ್ಲಿ ಮಂಗಳವಾರ ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರ ನಡೆಸಿ ಅವರು ಮಾತನಾಡಿದರು.
“ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿ ಎಲ್ಲ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಇದರಿಂದ ಸಾಮಾನ್ಯ ಜನರ ಜೀವನ ದುಸ್ತರವಾಗಿದೆ. ಇಷ್ಟಾದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬೆಲೆ ಏರಿಕೆಯನ್ನು ನಿಯಂತ್ರಿಸಲು ಮುಂದಾಗಿಲ್ಲ” ಎಂದು ಆರೋಪಿಸಿದರು.
ಬಿಜೆಪಿಗೆ ತಕ್ಕ ಪಾಠ ಕಲಿಸಿ:
“ಕೇಂದ್ರ ಸರ್ಕಾರಕ್ಕೆ ಬಡಜನರ ಬಗ್ಗೆ ಕಾಳಜಿಯೇ ಇಲ್ಲ. ಇದು ಜನವಿರೋಧಿ ಸರ್ಕಾರವಾಗಿದೆ. ಇಂತಹ ಕೆಟ್ಟ ಸರ್ಕಾರಕ್ಕೆ ಪಾಠ ಕಲಿಸಲು ಉಪ ಚುನಾವಣೆ ಉತ್ತಮ ಅವಕಾಶವಾಗಿದೆ. ಜನರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ನೀಡುವ ಮೂಲಕ ಬಿಜೆಪಿ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಬೇಕು” ಎಂದು ಹೇಳಿದರು.
“ಎ.17 ರಂದು ನಡೆಯುವ ಉಪಚುನಾವಣೆಯಲ್ಲಿ ಜನರು ಹಸ್ತದ ಗುರುತಿಗೆ ಮತ ನೀಡುವ ಮೂಲಕ ನನ್ನನ್ನು ಗೆಲ್ಲಿಸಬೇಕು. ತಮ್ಮ ಸೇವೆ ಸಲ್ಲಿಸಲು ಒಂದು ಬಾರಿ ಅವಕಾಶ ಕಲ್ಪಿಸಿಕೊಡಬೇಕು” ಎಂದು ಮನವಿ ಮಾಡಿದರು.
ಮಾಜಿ ಸಚಿವರಾದ ಎಂ.ಬಿ. ಪಾಟೀಲ, ಪ್ರಕಾಶ ಹುಕ್ಕೇರಿ, ಮಾಜಿ ಶಾಸಕ ಅಶೋಕ ಪಟ್ಟಣ, ಮುಖಂಡರಾದ ವೀಣಾ ಕಾಶಪ್ಪನವರ, ಚಂದ್ರಶೇಖರ್ ರಾಠೋಡ್, ಜಿಪಂ ಸದಸ್ಯ ಜಾವೂರ್ ಹಾಜಿ ಸೇರಿ ಇನ್ನಿತರರು ಭಾಗವಹಿಸಿದ್ದರು.