ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಕೊರೊನಾ ಮೊದಲ ಡೋಸ್ ಲಸಿಕೆ ಪಡೆದರು.
ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಕೊರೊನಾ ಕುರಿತು ಎಚ್ಚರ ವಹಿಸುವ ಕುರಿತು ಜನರಿಗೆ ಸಂದೇಶ ಸಾರುವ ನಿಟ್ಟಿನಲ್ಲಿ ಸತೀಶ ಅವರು ಲಸಿಕೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಗೋಕಾಕ ತಾಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು.
ಸುರಕ್ಷತಾ ನಿಯಮ ಪಾಲಿಸಿ:
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ ಅವರು, “ಕೊರೊನಾ ಎರಡನೇ ಅಲೆ ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಹೀಗಾಗಿ, ಪ್ರತಿಯೊಬ್ಬರು ಸುರಕ್ಷತಾ ನಿಯಮಗಳನ್ನು ಪಾಲಿಸಲೇಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು” ಎಂದು ಮನವಿ ಮಾಡಿದರು.
“18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರ ವಿಳಂಬ ಮಾಡದೇ ಆದಷ್ಟು ಬೇಗ ಎಲ್ಲರಿಗೂ ಲಸಿಕೆ ಕೊಡುವ ವ್ಯವಸ್ಥೆ ಮಾಡಬೇಕು” ಎಂದು ಅವರು ಒತ್ತಾಯಿಸಿದರು.
ಇದೇ 17 ರಂದು ಮತದಾನ ನಡೆದಿದ್ದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ ಸ್ಪರ್ಧಿಸಿದ್ದು, ನಾಳೆ ಫಲಿತಾಂಶ ಹೊರಬೀಳಲಿದೆ.