ರಾಮದುರ್ಗ : ಕಾಂಗ್ರೆಸ್ ಪಕ್ಷ ವಿಧಾನಪರಿಷತ್ ಚುನಾವಣಾ ಕಣಕ್ಕಿಳಿಸಿರುವ ಯುವ ಉತ್ಸಾಹಿ ನಾಯಕ ಚನ್ನರಾಜ್ ಹಟ್ಟಿಹೊಳಿ ಅವರಿಗೆ ತಮ್ಮ ಒಂದೇ ಒಂದು ಮತ ನೀಡಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿನಂತಿಸಿದರು.
ಬೆಳಗಾವಿ ವಿಧಾನಪರಿಷತ್ ಚುನಾವಣೆ ಹಿನ್ನೆಲೆ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಸವದತ್ತಿ ಮತ್ತು ರಾಮದುರ್ಗ ಪಂಚಾಯಿತಿ ಸದಸ್ಯರ ಸಮ್ಮಿಲನ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಿಸೆಂಬರ 10ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರ ಮತಯಾಚನೆಗೆ ಕಾಂಗ್ರೆಸ್ ಸಮಾವೇಶ ನಡೆಸಲಾಗುತ್ತಿದೆ. ಈಗಾಗಲೇ ತಾವು, ಶಾಸಕಿ ಹೆಬ್ಬಾಳಕರ ಇಡೀ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ, ಕಾಂಗ್ರೆಸ್ ಸರ್ಕಾರದ ಕಾರ್ಯ, ಅಭ್ಯರ್ಥಿ ಬಗ್ಗೆ ಹಾಗೂ ಬಿಜೆಪಿ ಆಡಳಿತ ವೈಪಲ್ಯ ತಿಳಿಸುವ ಪ್ರಯತ್ನ ಮಾಡಿದ್ದೇವೆ ಎಂದರು.
ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರು, ಮುಖಂಡರು ಒಗ್ಗೂಡಿ ಉತ್ಸಾಹಿಯಾಗಿರುವ ಚನ್ನರಾಜ್ ಹಟ್ಟಿಹೊಳಿ ಅವರನ್ನು ಅಖಾಡಕ್ಕೆ ಇಳಿಸಲಾಗಿದೆ. ಆದ್ದರಿಂದ ಪಂಚಾಯಿತಿ ಸದಸ್ಯರು ಆಶೀರ್ವಾದ ಮಾಡಬೇಕು. ಅವರಿಗೆ ತಮ್ಮ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಈ ಚುನಾವಣೆ ಗೆಲುವು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ನೀಡಲಿದೆ. ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯ್ತಿ, ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಆಗಲಿದೆ. ಆದ್ದರಿಂದ ಪಂಚಾಯಿತಿ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿ ಹೆಚ್ಚಿನ ಮತಗಳಿಂದ ಗೆಲ್ಲಿಸೋಕೆ ಸಹಕರಿಸುತ್ತಿರೆಂದು ಭಾವಿಸಿರುತ್ತೇನೆ ಎಂದು ಹೇಳುವ ಮೂಲಕ ಮತ ನೀಡುವಂತೆ ವಿನಂತಿಸಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚುನಾವಣಾ ವೀಕ್ಷಕ, ಶಾಸಕರೂ ಆಗಿರುವ ಎನ್.ಎ.ಹ್ಯಾರಿಸ್ , ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಮಾಜಿ ಶಾಸಕ ಅಶೋಕ ಪಟ್ಟಣ, ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.