ನಿಪ್ಪಾಣಿ : ‘ ಗ್ರಾಮ ಪಂಚಾಯಿತಿ ಎಲೆಕ್ಷನ್ ಮುಂದಿನ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ತಾಲ್ಲೂಕಿನ ಮರಾಠ ಮಂಡಳ ಸಭಾಂಗಣದಲ್ಲಿ ಶನಿವಾರ ಜರುಗಿದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಪಂ.ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
‘ ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು. ಇವುಗಳು 2023ರಂದು ಬರುವ ವಿಧಾನಸಭೆ ದಿಕ್ಸೂಚಿಯಾಗಿವೆ. ಆದ ಕಾರಣ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಶ್ರಮಿಸಬೇಕು’ ಎಂದರು.
‘ ಗ್ರಾ.ಪಂ ಚುನಾವಣೆಗಳನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನ ಮಾಡಬೇಕಿದೆ. ಕಾರ್ಯಕರ್ತರು ಹೆಚ್ಚು ಕೆಲಸ ಮಾಡಬೇಕು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಾಧನೆಯನ್ನು ಸ್ಮರಿಸಿ, ಜನರಿಗೆ ತಿಳಿಸುವ ಪ್ರಯತ್ನವನ್ನು ಕಾರ್ಯಕರ್ತರು ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ರಾದ ಕಾಕಾ ಸಾಹೇಬ್ ಪಾಟೀಲ್ , ಮಾಜಿ ಮಂತ್ರಿ ವೀರಕುಮಾರ್ ಪಾಟೀಲ್, ಮಾಜಿ ಶಾಸಕ ಸುಭಾಸ ಜೋಶಿ, ಲಕ್ಷ್ಮಣರಾವ್ ಚಿಂಗಳೆ ಗೋಪಾಳದಾದಾ ಪಾಟೀಲ, ವಿಲಾಸ ಗಾಡಿವಡ್ಡರ , ಜಿಲ್ಲಾ ಪಂಚಾಯತ್ ಸದಸ್ಯ ರಾಜೇಂದ್ರ ವಡ್ಡರ , ರಾಜೇಶ್ ಕದಂ ಪ್ರದೀಪ್ ಜಾಧವ್ ಇತರರು ಇದ್ದರು.