ಬೆಳಗಾವಿ: ನರೇಗಾ ಯೋಜನೆಯಿಂದ ಸರ್ವ ಗ್ರಾಮಗಳ ಅಭಿವೃದ್ಧಿ ಸಾಧ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು.ಯಮಕನಮರಡಿ ಮತಕ್ಷೇತ್ರದ ಹೊಸ ವಂಟಮೂರಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ 1 ಕೋಟಿ ರೂ. ವೆಚ್ಚದ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮುದಾಯದ ಸಹಯೋಗದೊಂದಿಗೆ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಕ್ತ ಅವಕಾಶ ಕಲ್ಪಿಸುವ ನರೇಗಾ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದೇ ಗ್ರಾಮ ಪಂಚಾಯತಿಗೆ ನಮೂನೆ 6 ಸಲ್ಲಿಸಿ ಸ್ಥಳೀಯವಾಗಿ ಉದ್ಯೋಗ ಪಡೆಯಬೇಕು. ಇದು ನಿಮ್ಮ ಹಕ್ಕು. ದುರ್ಬಲ ವರ್ಗದ ಕುಟುಂಬಗಳಿಗೆ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.
ಇದೇ ವೇಳೆ ಹೊಸ ವಂಟಮೂರಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಸತೀಶ್ ಜಾರಕಿಹೊಳಿ ಅವರು, 12 ಲಕ್ಷ ರೂ. ಸ್ವಂತ ವೆಚ್ಚದಲ್ಲಿ ಪದವಿ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿ, ನಂತರ ಗ್ರಾಮದ ಯುವಕರು ಹಮ್ಮಿಕೊಂಡಿದ್ದ ವ್ಹಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆ ದೈಹಿಕ, ಮಾನಸಿಕ ಆರೋಗ್ಯಕ್ಕೆ ಪೂರಕ. ಕ್ರೀಡಾ ಚಟುವಟಿಕೆಯಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಸಿದ್ದು ಸುಣಗಾರ್, ಗ್ರಾಮ ಅಧ್ಯಕ್ಷ ಮಹಾದೇವಿ ಚೌಗಲೆ, ಲಗಮನಗೌಡ ಪಾಟೀಲ್, ಸಿದ್ದಪ್ಪ, ಶಿವಪ್ಪ ವನ್ನೂರಿ ಸೇರಿದಂತೆ ಹೊಸ ವಂಟಮೂರಿ ಗ್ರಾಮ ಉಪಾಧ್ಯಕ್ಷರು, ಸದಸ್ಯರು, ಸಾರ್ವಜನಿಕರು ಇದ್ದರು.