ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ತಯಾರಿ ನಡೆಸುವಂತೆ ಎಲ್ಲರಿಗೂ ಸೂಚಿಸಿದ್ದಾರೆಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಕುಮಾರ ಗಂಧರ್ವ ರಂಗ ಮಂದಿರದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕೆಂದು ಹೈಕಮಾಂಡ್ ಸೂಚಿಸಿದೆ. ಚುನಾವಣೆಗೆ ಇನ್ನೂ ಅಭ್ಯರ್ಥಿಗಳು ನೋಡಿಲ್ಲ. ಆದರೆ ಗೆಲ್ಲುವವರನ್ನೇ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ವಿಧಾನಸಭೆ ಚುನಾವಣೆಯಲ್ಲಿ ಯಾವ ರೀತಿ ಕೆಲಸ ಮಾಡಿದ್ದೇವೆ ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸುತ್ತೇವೆ ಎಂದರು. ಬೆಳಗಾವಿಯಲ್ಲಿ ರಿಂಗ್ ರೋಡ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರದಲ್ಲಿಯೇ ಕಾಮಗಾರಿಗಳಿಗೆ ಅನುಮತಿ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.