ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದರು.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರು ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಬಳಿಕ ಮಾಡಬೇಕು ಅಂತಾ ಏನು ಇಲ್ಲ. ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡಿದ ಬಳಿಕವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದಿಂದ ಮೂರು ಜನರ ಹೆಸರನ್ನು ಹೈಕಮಾಂಡ್ ಗೆ ಶಿಫಾರಸ್ಸು ಮಾಡಲಾಗಿದೆ. ಆ ಮೂರು ಜನರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ ನನ್ನ ಹೆಸರು ಸಹ ಇದೆ. ಆದ್ರೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಇಲ್ಲ. ಪ್ರಕಾಶ ಹುಕ್ಕೇರಿ ಅವರು ಆಕಾಂಕ್ಷಿಯಾಗಿದ್ದಾರೆ. ಆದರೆ ಅವರು ಹೆಸರು ಸಹ ಇಲ್ಲ ಎಂದು ಸ್ಪಷ್ಟ ಪಡಿಸಿದರು.
ಸುವರ್ಣ ವಿಧಾನಸೌಧ ಮುತ್ತಿಗೆ :
ಈಗಾಗಲೇ ಬೆಳಗಾವಿಯಲ್ಲಿ ಸರ್ಕಾರ ಎರಡು ಭಾರಿ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಬೇಕಿತ್ತು. ಆದ್ರೆ ನಡೆಸದೆ ಇರುವ ಕಾರಣದಿಂದ ಕಾಂಗ್ರೆಸ್ ಪಕ್ಷದಿಂದ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ರಾಜ್ಯ ಕಾಂಗ್ರೆಸ್ ನಾಯಕರು ಬೆಳಗಾವಿ ಉಪಚುನಾವಣೆಗೂ ಮೊದಲೇ ಸುವರ್ಣಸೌಧ ಮುತ್ತಿಗೆ ಹಾಕಲಾಗುತ್ತದೆ ಎಂದು ತಿಳಿಸಿದರು.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿ, ಅಲ್ಲಿಂದ ಸುವರ್ಣ ವಿಧಾನಸೌಧದವರೆಗೆ ಶಕ್ತಿ ಪ್ರದರ್ಶನ ಮಾಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ರಾಜು ಸೇಠ್ , ವೀರಕುಮಾರ್ ಪಾಟೀಲ್, ಸುನೀಲ ಹನುಮಣ್ಣವರ, ಜಯಶ್ರೀ ಮಾಳಗಿ, ಮಹಾವೀರ ಮೋಹಿತೆ ಸೇರಿದಂತೆ ಇತರರು ಇದ್ದರು.