ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಸ್ಪರ್ಧೆ ಮಾಡುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ.
ಬೆಳಗಾವಿ ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಹಿರಿಯ ನಾಯಕರ ಮಹತ್ವದ ಸಭೆ ನಡೆಯುತ್ತಿದೆ.
ಸಭೆಯಲ್ಲಿ ಹಿರಿಯ ನಾಯಕ ದಿನೇಶ್ ಗುಂಡೂರಾವ್ ಅವರು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಪ್ರಸ್ತಾಪ ಮಾಡಿದರು. ಇದಕ್ಕೆ ಎಲ್ಲ ಮುಖಂಡರು ಬೆಂಬಲ ವ್ಯಕ್ತಪಡಿಸಿದರು. ಸತೀಶ ಜಾರಕಿಹೊಳಿ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಡ ಹೇರುತ್ತಿದ್ದಾರೆ. ಆದರೆ, ಈ ಬಗ್ಗೆ ಸತೀಶ ಸ್ಪಷ್ಟ ನಿರ್ಧಾರ ತಿಳಿಸಿಲ್ಲ. ಹೀಗಾಗಿ, ಸತೀಶ ಅವರ ಮನವೊಲಿಸಲು ಕಾಂಗ್ರೆಸ್ ನಾಯಕರು ಸಭೆಯನ್ನು ಮುಂದುವರೆಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪರ್ಧೆ ಮಾಡಿದ್ರೆ, ಬಿಜೆಪಿಗೆ ಪ್ರಬಲ ಪೈಪೋಟಿ ನೀಡಬಹುದು ಎಂಬುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ ಆಗಿದೆ.
ಹೈಕಮಾಂಡ್ ಗೆ ಶಿಫಾರಸ್ಸು:
ಸತೀಶ್ ಜಾರಕಿಹೊಳಿ ಅವರು ಸ್ಪರ್ಧೆ ಮಾಡಲು ಒಪ್ಪದಿದ್ದರೆ, ಸತೀಶ್ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಹೆಸರುಗಳನ್ನು ಹೈಕಮಾಂಡ್ ಗೆ ಶಿಫಾರಸ್ಸು ಮಾಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ನಾಯಕರ ಸಭೆ ಮುಂದುವರೆದಿದ್ದು, ಕೆಲವೇ ಕ್ಷಣಗಳಲ್ಲಿ ಅಂತಿಮ ತೀರ್ಮಾಣ ಹೊರಬೀಳುವ ಸಾಧ್ಯತೆ ಇದೆ.
ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರು ಕೊರೊನಾ ಸೋಂಕಿನಿಂದ ನಿಧನ ಹೊಂದಿದ್ದರಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ತೆರವಾಗಿತ್ತು. ಏಪ್ರಿಲ್ 17 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಒಂದು ಡಜನ್ಗೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳು ಬಿಜೆಪಿಯಲ್ಲಿದ್ದಾರೆ.
ಮಾರ್ಚ್ 23 ರಿಂದ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಶುರುವಾಗಲಿದ್ದು ಅಷ್ಟರೊಳಗೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿವೆ.